Gumati movie release on this week ಕಡಲತಡಿಯ ಕುಡುಬಿ ಜನಜೀವನದ ‘ಗುಂಮ್ಟಿ’ ಚಿತ್ರ ಈ ವಾರ ತೆರೆಗೆ ಬರುತ್ತಿದೆ.

’ಗುಂಮ್ಟಿ’ ಸಿನೆಮಾ ಈ ವಾರ ಬಿಡುಗಡೆ

ಕುಡುಬಿ ಜನಜೀವನ ‘ಗುಂಮ್ಟಿ’ ಮೂಲಕ ಅನಾವರಣ

ತೆರೆಗೆ ಬರುತ್ತಿದೆ ಕಡಲತಡಿಯ ಕಥೆ

ಈಗಾಗಲೇ ತನ್ನ ಶೀರ್ಷಿಕೆ, ಕಥಾಹಂದರದ ಮತ್ತು ಟ್ರೇಲರ್ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ‘ಗುಂಮ್ಟಿ’ ಚಿತ್ರ ಈ ವಾರ (ಡಿ. 06, ಶುಕ್ರವಾರ) ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

‘ತಸ್ಮೈ ಪ್ರೊಡಕ್ಷನ್ಸ್’ ಮತ್ತು ‘ಜ್ಯೋತಿ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಜಂಟಿಯಾಗಿ ನಿರ್ಮಾಣವಾಗುತ್ತಿರುವ ‘ಗುಂಮ್ಟಿ’ ಸಿನಿಮಾವನ್ನು ವಿಕಾಸ್ ಎಸ್. ಶೆಟ್ಟಿ ನಿರ್ಮಿಸುತ್ತಿದ್ದಾರೆ. ‘ಗುಂಮ್ಟಿ’ ಚಿತ್ರಕ್ಕೆ ಅನೀಶ್ ಡಿಸೋಜಾ ಛಾಯಾಗ್ರಹಣ, ಶಿವರಾಜ ಮೇಹು ಸಂಕಲನವಿದೆ. ‘ಗುಂಮ್ಟಿ’ ಸಿನೆಮಾದ ಹಾಡಿಗೆ ಡೊಂಡಿ ಮೋಹನ್ ಸಾಹಿತ್ಯ ರಚಿಸಿ, ಸಂಗೀತ ಸಂಯೋಜಿಸಿದ್ದಾರೆ.

ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನೆಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನೆಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, ‘ಗುಂಮ್ಟಿ’ ಸಿನೆಮಾಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದು, ಜೊತೆಗೆ ತೆರೆಮೇಲೆ ನಾಯಕ ನಟನಾಗಿಯೂ ಕಾಣಿಸಿಕೊಂಡಿದ್ದಾರೆ.

‘ಗುಂಮ್ಟಿ’ ಸಿನೆಮಾದಲ್ಲಿ ವೈಷ್ಣವಿ ನಾಡಿಗ್ ನಾಯಕಿಯಾಗಿ ಮಲ್ಲಿ ಎಂಬ ಹೆಸರಿನ ಕುಡುಬಿ ಸಮುದಾಯದ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಜನ್ ಛತ್ರಪತಿ, ಕರಣ್ ಕುಂದರ್, ಯಶ್ ಆಚಾರ್ಯ, ಪ್ರಭಾಕರ ಕುಂದರ್, ರಘು ಪಾಂಡೇಶ್ವರ, ಚೇತನ ನೈಲಾಡಿ, ಚಿತ್ರಕಲಾ, ನೂರ್ ಅಹ್ಮದ್, ಸ್ವರಾಜ್ ಲಕ್ಷ್ಮಿ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

‘ಕರ್ನಾಟಕದ ಕರಾವಳಿ ಪ್ರದೇಶವಾದ ಕುಂದಾಪುರದ ಸುತ್ತಮುತ್ತ ಕಂಡುಬರುವ ಜಾನಪದ ಕಲೆಯೊಂದನ್ನು ಈ ಸಿನೆಮಾದಲ್ಲಿ ತೆರೆಗೆ ತರುವ ಪ್ರಯತ್ನ ಮಾಡಿದ್ದೇವೆ. ನೈಜತೆಯಿಂದ ಸಿನೆಮಾ ಮೂಡಿಬಂದಿದ್ದು, ಎಲ್ಲರಿಗೂ ಈ ಸಿನೆಮಾದ ಕಥಾಹಂದರ ಇಷ್ಟವಾಗಲಿದೆ’ ಎಂಬ ವಿಶ್ವಾಸ ‘ಗುಂಮ್ಟಿ’ ಚಿತ್ರತಂಡದ್ದು.

‘ಇದೊಂದು ಕಲಾತ್ಮಕ ಸಿನೆಮಾವಾಗಿದ್ದು, ಕರ್ನಾಟಕದ ಕರಾವಳಿ ತೀರದ ಕುಡುಬಿ ಜನಾಂಗದ ಕಥೆಯನ್ನು ತೆರೆಮೇಲೆ ಹೇಳಲು ಹೊರಟಿದ್ದೇವೆೆ. ‘ಗುಂಮ್ಟಿ’ ಎಂಬುದು ಕುಡುಬಿ ಸಮುದಾಯಕ ಕಲಾಪ್ರಾಕಾರದ ಸಾಂಪ್ರದಾಯಿಕ ವಾದ್ಯವಾಗಿದ್ದು, ಅದನ್ನೇ ಸಿನೆಮಾದ ಟೈಟಲ್ ಆಗಿ ಇಟ್ಟುಕೊಂಡಿದ್ದೇವೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷ ‘ಗುಂಮ್ಟಿ’ ಸಿನಿಮಾದಲ್ಲಿ ಅನಾವರಣವಾಗಲಿದೆ’ ಎಂಬುದು ಶೀರ್ಷಿಕೆ ಮತ್ತು ಕಥಾಹಂದರದ ಬಗ್ಗೆ ‘ಗುಂಮ್ಟಿ’ಯ ನಿರ್ದೇಶಕ ಕಂ ನಾಯಕ ನಟ ಸಂದೇಶ್ ಶೆಟ್ಟಿ ಆಜ್ರಿ ಅವರ ವಿವರಣೆ.

ಈಗಾಗಲೇ ಸಿನೆಮಾ ಬಿಡುಗಡೆಗೂ ಮೊದಲೇ ಎಲ್ಲ ಕಡೆಗಳಿಂದ ‘ಗುಂಮ್ಟಿ’ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗಾಗಲೇ ಉಡುಪಿ ಜಿಲ್ಲೆಯ ಸುತ್ತಮುತ್ತಲ ಪ್ರದೇಶ ಸುಮಾರು 50ಕ್ಕೂ ಹೆಚ್ಚು ಪ್ರದರ್ಶನಗಳು ಮುಂಗಡವಾಗಿ ಬುಕ್ಕಿಂಗ್ ಆಗಿದೆ. ರಾಜ್ಯದಾದ್ಯಂತ ಸುಮಾರು 25ಕ್ಕೂ ಹೆಚ್ಚಿನ ಕಡೆಗಳಲ್ಲಿ ‘ಗುಂಮ್ಟಿ’ ಬಿಡುಗಡೆಯಾಗಿ ತೆರೆಗೆ ಬರುತ್ತಿದೆ.

ಇನ್ನು ‘ಗುಂಮ್ಟಿ’ ಸಿನೆಮಾವನ್ನು ಉಡುಪಿ, ಕುಂದಾಪುರ, ಕಾರವಾರ, ಶಿರಸಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮಹಾರಾಷ್ಟ್ರದ ಸೋಲಾಪುರ ಹೀಗೆ ಕರಾವಳಿ-ಮಲೆನಾಡು ಮತ್ತು ಪಶ್ಚಿಮ ಘಟ್ಟದ ಸುತ್ತಮುತ್ತ ಸುಮಾರು 30ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor